← ಶ್ರೀರಾಮ

ಆವ ಸಿರಿಯಲಿ ನೀನು ಎನ್ನ ಮರೆತೆ

📂 ಶ್ರೀರಾಮ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾನಡಾ
🥁 ತಾಳ: ಆಟತಾಳ
ಆವ ಸಿರಿಯಲಿ ನೀನು ಎನ್ನ ಮರೆತೆ
ದೇವ ಜಾನಕೀರಮಣ ಪೇಳು ರಘುಪತಿಯೆ ||ಪ||

ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆ
ಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆ
ಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆ
ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ||1||

ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆ
ಮೃಢ ನಿನ್ನ ಸಖನಾದನೆಂಬ ಸಿರಿಯೆ
ಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆ
ದೃಢವಾಗಿ ಹೇಳೆನಗೆ ದೇವಕೀ ಸುತನೆ ||2||

ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ
ಕಾಮ ನಿನ್ನ ಸುತನಾದನೆಂಬ ಸಿರಿಯೆ
ಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ
ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ||3||

ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆ
ಹನುಮ ನಿನ್ನ ಬಂಟನಾದನೆಂಬ ಸಿರಿಯೆ
ಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆ
ಅನುಮಾನ ಮಾಡದೆ ಪೇಳೊ ನರಹರಿಯೆ ||4||

ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ
ಪಂಥವೇ ನಿನಗಿದು ಆವ ನಡತೆ
ಕಂತುಪಿತ ಕಾಗಿನೆಲೆಯಾದಿಕೇಶವ ರಂಗ
ಚಿಂತೆಯನು ಬಿಡಿಸಿ ಸಂತೋಷವನು ಪಡಿಸೊ ||5||
← ಶ್ರೀರಾಮ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.